ಕಾವೇರಿ ನೀರಿಗಾಗಿ ಆಗ್ರಹಿಸಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು ಈ ನಡುವೆ ಬಂದ್ ಗೂ ಮುನ್ನ ಹೋರಾಟಗಾರರನ್ನ ಬಂಧಿಸಿರುವುದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಎಂದು ಗುಡುಗಿದ್ದಾರೆ.
ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಜಲಾಶಯಗಳು ಭರ್ತಿಯಾಗದೇ ಕುಡಿಯುವ ನೀರಿಗೆ ಕೊರತೆ ಉಂಟಾಗುವ ಸ್ಥಿತಿ ಎದುರಾಗಿದೆ. ಹೀಗಿದ್ದರೂ ತಮಿಳುನಾಡಿಗೆ ನೀರು ಹರಿಸಿ ಎಂದು ಸುಪ್ರೀಂಕೋರ್ಟ್ ಆದೇಶಿಸಿದ್ದು ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿದೆ. ಈ ನಡೆಯನ್ನ ಖಂಡಿಸಿ ಸರ್ಕಾರದ ವಿರುದ್ಧ ಇಂದು ಬೆಂಗಳೂರು ಬಂದ್ ಮಾಡಲಾಗಿದ್ದು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಕುರಿತು ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರನ್ನು, ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಎಂದು ಮಾಜಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.