ಬೆಂಗಳೂರು, ಸೆಪ್ಟೆಂಬರ್ 21: ತಮಿಳುನಾಡಿಗೆ ಕೆಆರ್ಎಸ್ನಿಂದ 5000 ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿರುವ ವಿಚಾರವಾಗಿ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ. ಹೆಜ್ಜೆಹೆಜ್ಜೆಗೂ ತಪ್ಪು ಮಾಡಿದ್ದು ಕರ್ನಾಟಕ ಕಾಂಗ್ರೆಸ್ ಸರ್ಕಾರ. ಈ ಮಾತನ್ನು ನಾನು ಸರ್ವಪಕ್ಷ ಸಭೆಯಲ್ಲೇ ಒತ್ತಿ ಹೇಳಿದ್ದೆ. ಕಾವೇರಿ ಜಲ ನಿಯಂತ್ರಣ ಸಮಿತಿ & ಪ್ರಾಧಿಕಾರದ ನಿರ್ದೇಶನ ಬರುವುದಕ್ಕೂ ಮೊದಲೂ ಹೇಳಿದ್ದೆ. ಹೇಳಿದ ಮಾತನ್ನು ಕೇಳಿಸಿಕೊಳ್ಳುವ ಸೌಜನ್ಯ, ಜನಪರ ಕಾಳಜಿ ಸರಕಾರಕ್ಕೆ ಇರಲೇ ಇಲ್ಲ ಎಂದು ಕುಮಾರಸ್ವಾಮಿ ದೂರಿದ್ದಾರೆ.