ಬೆಂಗಳೂರು ಅ.11: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಧ್ಯೆ ರಾಜಕೀಯ ಕೆಸರೆಚಾಟ ಶುರುವಾಗಿದೆ. ಸಮಿಶ್ರ ಸರ್ಕಾರ ಬೀಳಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರಣ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿಯವರು ಆರೋಪ ಮಾಡಿದ್ದಾರೆ. ಇದರಿಂದ ಇಬ್ಬರ ಮಧ್ಯೆ ವಾಗ್ಯುದ್ಧ ಶರುವಾಗಿದೆ. ಅಲ್ಲದೆ ಕಾಂಗ್ರೆಸ್ ಮಂಗಳವಾರ ಸರಣಿ ಟ್ವೀಟ್ ಮಾಡುವ ಮೂಲಕ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡಿದ್ದತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್ (JDS) ಸರಣಿ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದೆ. “ಮೂರ್ಖರಿಗೆ ಬುದ್ಧಿ ಮಂದ ಎನ್ನುವುದು ಮಾತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೇ ಆಗಿದೆ. ಅಧಿಕಾರದ ಮದದಿಂದ ಅದರ ಮಿದುಳಿಗೂ ಗೆದ್ದಲು ಹಿಡಿದಿದೆ. 4 ವರ್ಷದ ಹಿಂದೆ ಸರಕಾರ ಮಾಡಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಮನೆಗೆ ಹೆಚ್ಡಿ ಕುಮಾರಸ್ವಾಮಿ ಅವರು ಬಂದಿದ್ದರಾ? ಸುಳ್ಳು ಹೇಳುವುದಕ್ಕೆ ಸಾಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ? ಎಂದು ಪ್ರಶ್ನಿಸಿದೆ.
“‘ಕೈ’ ಅಭಯದ ಸಂಕೇತವೆಂದು ನಂಬಿದ್ದರು ಕುಮಾರಸ್ವಾಮಿ. ಆದರೆ, ಡಿ.ಕೆ.ಶಿವಕುಮಾರ್ ಅವರದ್ದು ‘ಕೈ’ ಎತ್ತುವುದಷ್ಟೇ ಅಲ್ಲ, ‘ಕೈ’ ಕೊಡುವುದರಲ್ಲೂ ಎತ್ತಿದ ‘ಕೈ’ ಎಂದು ಅವರಿಗೆ ಗೊತ್ತಾಗಲೇ ಇಲ್ಲ. ಅಸೆಂಬ್ಲಿಯಲ್ಲಿ ‘ಕೈ’ ಎತ್ತಿದರು, ಮಂಡ್ಯದಲ್ಲೂ ‘ಕೈ’ ಎತ್ತಿದರು. ಬೆಂಗಳೂರು ಗ್ರಾಮಾಂತರದಲ್ಲೂ ‘ಕೈ’ ಎತ್ತಿದರು!! ಪಾಪ.. ಕುಮಾರಸ್ವಾಮಿ ಅವರು ನಂಬಿದರು. ಬೆಂಗಳೂರು ಗ್ರಾಮಾಂತರದಲ್ಲಿ ಕುಮಾರಸ್ವಾಮಿಯವರು, ಅವರ ‘ಕೈ’ ಹಿಡಿದರು. ಮಂಡ್ಯದಲ್ಲಿ ಅದೇ ‘ಕೈ’ ಅವರನ್ನು ನಡುರಸ್ತೆಯಲ್ಲಿ ಬಿಟ್ಟು ಜಾರಿಕೊಂಡಿತು” ಎಂದು ಹರಿಹಾಯ್ದಿದೆ.