ಮೈಸೂರು, ನ.28: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಆಗ ನಾಡದೇವತೆ ಚಾಮುಂಡೇಶ್ವರಿಗೆ 2000 ರೂ. ಅರ್ಪಿಸಲಾಗಿತ್ತು. ಸದ್ಯ ಈಗ 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ. ಪ್ರತಿ ತಿಂಗಳು 2 ಸಾವಿರ ರೂ.ನಂತೆ 1,18,000 ಹಣವನ್ನು ಸಂದಾಯ ಮಾಡಲಾಗಿದೆ.
ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಾಡದೇವತೆಗೆ 59 ತಿಂಗಳ ಒಟ್ಟು ಹಣ 1,18,000 ರೂಗಳನ್ನು ಸಂದಾಯ ಮಾಡಲಾಗಿದೆ. ಈ ಹಿಂದೆ ಪ್ರತಿ ತಿಂಗಳು ಚಾಮುಂಡಿ ದೇವಸ್ಥಾನಕ್ಕೆ ಯೋಜನೆಯ ಹಣ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಎಂಎಲ್ಸಿ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು. ಬಳಿಕ ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದರು. ಇದರ ಬೆನ್ನಲ್ಲೆ ಈಗ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ಮಾಡಲಾಗುತ್ತಿದ್ದು 59 ತಿಂಗಳ ಒಟ್ಟು ಮೊತ್ತವನ್ನು ದೇವಸ್ಥಾನಕ್ಕೆ ಸಂದಾಯ ಮಾಡಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ. ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯವಾಗಲಿದೆ.
ಪತ್ರ ಬರೆದು ಮನವಿ ಮಾಡಿದ್ದ ದಿನೇಶ್ ಗೂಳಿಗೌಡ
ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ. ಆ ಹಣದಿಂದ ಸಾಕಷ್ಟು ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆಗೊಂಡಿದೆ. ಅಲ್ಲದೆ, ನಮ್ಮ ಸರ್ಕಾರದ ಹಾಗೂ ತಮ್ಮಗಳ ಬಗ್ಗೆ ಶುಭ ಹಾರೈಕೆಯನ್ನು ಮಾಡುತ್ತಲೇ ಇದ್ದಾರೆ.
ಈಗ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ನಿಖರವಾಗಿ ತಲಾ 2 ಸಾವಿರ ರೂ. ಹಣ ಜಮಾ ಮಾಡುತ್ತಿರುವುದು ಖುಷಿಯ ವಿಚಾರವಾಗಿದೆ. ಅದೇ ರೀತಿ ಪ್ರತಿ ತಿಂಗಳ ಕಂತನ್ಹು ಉಜಮಾನಿಯರಿಗೆ ಪಾವತಿಸುವ ಮೊದಲು ನಾಡದೇವಿ ಚಾಮುಂಡೇಶ್ವರಿಯ ಸನ್ನಿಧಿಗೂ ಸಲ್ಲಿಸಬೇಕು. ಆ ಮೂಲಕ ಮೊದಲ ಹಣ ನಾಡದೇವತೆಗೆ ಸಲ್ಲಿಕೆಯಾಗಿ ಬಳಿಕ ಉಳಿದವರಿಗೆ ಪಾವತಿಯಾಗುವಂತೆ ವ್ಯವಸ್ಥೆ ಮಾಡಲು ದಿನೇಶ್ ಅವರು ಪತ್ರದ ಮೂಲಕ ಮನವಿ ಮಾಡಿದ್ದರು. ಅದರ ಫಲವಾಗಿ ಚಾಮುಂಡೇಶ್ವರಿ ತಾಯಿಗೆ ಹಣ ಸಂದಾಯ ಮಾಡಲಾಗುತ್ತಿದೆ.