ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಬಂಧಿತೆ. ಬಿಇಒ ಆಂಜನಪ್ಪ ನೀಡಿದ ದೂರಿನನ್ವಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು. ಬಿಇಓ ಆಂಜನಪ್ಪ ನೀಡಿದ ದೂರಿನನ್ವಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆ, ಶುಕ್ರವಾರ ರಾತ್ರಿ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮರನ್ನ ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಬ್ಯಾಡರಹಳ್ಳಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಯನ್ನು ರಾತ್ರಿ ಬಂಧನ ಮಾಡಿದ ಹಿನ್ನಲೆ, ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ರಾಜ್ಯ ರಾಜಧಾನಿ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ನಮ್ಮೂರು ಸರ್ಕಾರಿ ಶಾಲೆಯಲ್ಲಿ ಮಕ್ಕಳ ಕೈಯಿಂದಲೇ ಶಾಲಾ ಶಿಕ್ಷಕರು ಶೌಚಾಲಯ ಸ್ವಚ್ಛ ಮಾಡಿದ್ದಾರೆ.
ಒಬ್ಬ ವಿದ್ಯಾರ್ಥಿ ಕ್ಲೀನಿಂಗ್ ದ್ರಾವಣ ಸುರಿಯುತ್ತಿದ್ದರೆ, ಮತ್ತೊಬ್ಬ ವಿದ್ಯಾರ್ಥಿ ಪೊರಕೆ ಹಿಡಿದು ನೆಲ ಗುಡಿಸುತ್ತಿದ್ದನು. ಇದರ ವಿಡಿಯೋವನ್ನು ಯಾರೋ ಒಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲದೇ, ಅದರ ವಿಡಿಯೋಗಳು ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು.
ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದು ಸುದ್ದಿಯಾಗುತ್ತಿದ್ದಂತೆಯೇ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಅಂಜನಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಶಿಕ್ಷಕಿ ತಪ್ಪು ಮಾಡಿರುವುದು ಸಾಬೀತಾದ ಕಾರಣ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನಪ್ಪ ಜಂಟಿ ನಿರ್ದೇಶಕರಿಗೆ ಮುಖ್ಯ ಶಿಕ್ಷಕಿ ವಿರುದ್ಧ ವರದಿ ನೀಡಿದ್ದರು. ಈ ವರದಿ ಆಧಾರದ ಮೇಲೆ ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಸದ್ಯ ಈಗ ಅವರನ್ನು ಬಂಧಿಸಲಾಗಿದೆ.
ಈ ಶಾಲೆಯಲ್ಲಿ ಒಟ್ಟು 600 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ಮಕ್ಕಳೇ ಎಲ್ಲ ಕೆಲಸ ಮಾಡುತ್ತಾರೆ. ಜತೆಗೆ ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಕೂಡ ಇವರದೇ, ಕೆಲಸ ಮಾಡದೇ ಹೋದರೇ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಮಕ್ಕಳಿಗೆ ಹೊಡೆಯುವುದು ಬೈಯುವುದು ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಕ್ಕಳ ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿದ್ದರು. ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡುವಂತೆ ಗಲಾಟೆ ಮಾಡಿದ್ದರು.