ಮಂಡ್ಯ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದೆಡೆ 2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದ ಬಿಜೆಪಿ ಕಾರ್ಯಕರ್ತ ರವಿಯನ್ನು ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. 2022ರಲ್ಲಿ ಮಂಡ್ಯದ ಸಂಜಯ್ ಸರ್ಕಲ್ನಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವನ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಅಂದು ಪಾಕ್ ವಿದೇಶಾಂಗ ಸಚಿವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ. ಈ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಕನ್ಫೂಜ್ ಆಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು. ಇದೀಗ ಎರಡು ವರ್ಷದ ಬಳಿಕ ಈ ಸಂಬಂಧ ಬಿಜೆಪಿ ಕಾರ್ಯಕರ್ತ ರವಿ ಮೇಲೆ ಕಾಂಗ್ರೆಸ್ ದೂರು ಸಲ್ಲಿಸಿದೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.