ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಸ್ಪರ್ಧಿಸುವುದು ಬಹುತೇಕ ಫಿಕ್ಸ್ ಆಗಿದೆ. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಾಗಿದೆ. ಈ ವಿಚಾರವಾಗಿ ಮಂಗಳವಾರ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಸಭೆಯಲ್ಲಿಯೂ ಚರ್ಚೆಯಾಗಿದೆ. ಉಭಯ ಪಕ್ಷದ ನಾಯಕರು ಮಹತ್ವದ ಸಭೆ ನಡೆಸಿದ್ದು, ಸಮಾಲೋಚನೆ ಮಾಡಿದ್ದಾರೆ. ಸಭೆಯಲ್ಲಿ ಮಾಜಿ ಸಚಿವರಾದ ಸಿಪಿ ಯೋಗೆಶ್ವರ್, ಮುನಿರತ್ನ, ಶಾಸಕ ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಉಭಯ ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ. ಬಳಿಕ ಮಾತನಾಡಿದ ಕುಮಾರಸ್ವಾಮಿ, ಈಗ ನಾವು ತೀರ್ಮಾನ ತೆಗೆದುಕೊಳ್ಳುವುದು ಬೇಡ. ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗೊಣ. ಯಾರೇ ಸ್ಪರ್ಧೆ ಮಾಡಿದರೂ ಎನ್ಡಿಎ ಅಭ್ಯರ್ಥಿ ಗೆಲ್ಲಲು ಕೆಲಸ ಮಾಡೋಣ. ನಮ್ಮ ಅಭ್ಯರ್ಥಿ ಗೆಲ್ಲಿಸಲು ಒಗ್ಗಟ್ಟಿನಿಂದ ಹೋರಾಟ ಮಾಡೋಣ ಎಂದು ಹೇಳಿದರು.