ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಅಳಿಯನಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಪ್ರಸಾದ್ ಪಕ್ಷದ ಮೇಲೆ ಮುನಿಸಿಕೊಂಡಿದ್ದಾರೆ. ಶ್ರೀನಿವಾಸ್ ಪ್ರಸಾದ್ ಮುನಿಸು ಬೆನ್ನಲ್ಲೇ ಕುಟುಂಬಸ್ಥರು ಮತ್ತು ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಭೇಟಿ ನೀಡುವ ಮೂಲಕ ರಾಜಕೀಯ ಎದುರಾಳಿಗಳಿಬ್ಬರು ತಮ್ಮ 7 ವರ್ಷದ ಮುನಿಸನ್ನು ಶಮನಗೊಳಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಕೂಡ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿ ಪಕ್ಷದ ವಿರುದ್ಧ ಮುನಿಸನ್ನು ಶಮನ ಮಾಡಲು ಯತ್ನಿಸಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಮೈಸೂರಿನಲ್ಲಿ ನಡೆಯುವ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬರಲು ಶ್ರೀನಿವಾಸ್ ಪ್ರಸಾದ್ ಒಪ್ಪಿದ್ದಾರೆ. ಶ್ರೀನಿವಾಸ್ ಪ್ರಸಾದ್ ಬಹಳ ಹಿರಿಯ ಸಂಸತ್ ಸದಸ್ಯರು. ಮೋದಿ ಅವರ ಬಗ್ಗೆ ಬಹಳ ಗೌರವ ಇಟ್ಟುಕೊಂಡಿದ್ದಾರೆ. ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ 5 ನಿಮಿಷ ಇದ್ದು ಹೋಗಿ ಅಂತ ಮನವಿ ಮಾಡಿಕೊಂಡಿದ್ದೇನೆ. ಶ್ರೀನಿವಾಸ್ ಪ್ರಸಾದ್ ಅವರು ಬರಲು ಒಪ್ಪಿಕೊಂಡಿದ್ದಾರೆ. ಇದಕ್ಕೆ ಚಿರ ಋಣಿಯಾಗಿದ್ದೇನೆ ಎಂದರು.