ಧಾರವಾಡ: ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ದಿಂಗಾಲೇಶ್ವರ ಶ್ರೀಗಳು ನಾಪಮಪತ್ರವನ್ನು ಹಿಂಪಡೆದಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್ ಪಾಟೀಲ್ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ತರೆಸಿದ್ದಾರೆ.
ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸಮರ ಸಾರಿದ್ದು, ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದರು. ಇದಕ್ಕೆ ಬಿಜೆಪಿ ಸೊಪ್ಪು ಹಾಕಲಿಲ್ಲ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದರು. ಇವರ ಸ್ಪರ್ಧೆಗೆ ವೀರಶೈವ ಮಹಾಸಭಾ ಬೆಂಬಲ ವ್ಯಕ್ತಪಡಿಸಿತ್ತು. ಆದರೆ ಉತ್ತರ ಕರ್ನಾಟಕ ಪ್ರಮುಖ ಮಠಗಳಲ್ಲಿ ಒಂದಾದ ಧಾರವಾಡದ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತ್ರ ದಿಂಗಾಲೇಶ್ವರ ಸ್ವಾಮೀಜಿ ಅವರ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದರು.
ಹಿಂದೆ ಸರಿಯುವಂತೆ ಮನವಿ ಮಾಡಿದ ಸಿಎಂ, ಡಿಸಿಎಂ
ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸಲ್ಲಿಸಿರುವ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರಿಗೆ ಬೆಂಬಲಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಂಗಾಲೇಶ್ವರ ಸ್ವಾಮೀಜಿಗೆ ಮನವಿ ಮಾಡಿದ್ದಾರೆ. ಡಿಕೆ ಶಿವಕುಮಾರ್ ಅವರು ದಿಂಗಾಲೇಶ್ವರ ಶ್ರೀಗೆ ಕರೆ ಮಾಡಿ ಮಾತನಾಡಿದ್ದು, ನಿಮ್ಮ ನಿರ್ಧಾರ ನಮಗೆ ಮೊದಲೇ ಗೊತ್ತಿದ್ದರೆ ನಮ್ಮ ಪಕ್ಷದಿಂದಲೇ ಅವಕಾಶ ಮಾಡಲು ಸುಲಭವಾಗುತ್ತಿತ್ತು. ಇದೀಗ ಪಕ್ಷ ದಿಂದ ವಿನೋದ್ ಅಸೂಟಿ ಅವರಿಗೆ ಟಿಕೆಟ್ ನೀಡಿದ್ದೇವೆ. ಕಾಂಗ್ರೆಸ್ ಹಾಗೂ ನಿಮ್ಮ ನಡುವೆ ಮತ ವಿಭಜನೆಯಾದರೆ ಜೋಶಿ ಗೆಲುವು ಸುಲಭವಾಗಲಿದೆ. ಹೀಗಾಗಿ ನಾವು ಇಬ್ಬರೂ ಸೇರಿ ಅವರ ವಿರುದ್ದ ಹೋರಾಡಬೇಕು ಎಂದಿದ್ದಾರೆ.
ಡಿಕೆ ಶಿವಕುಮಾರ್ ಮಾತ್ರವಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕರೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರ ವಾಪಸ್ ಪಡೆಯುವ ಮೂಲಕ ಕಾಂಗ್ರೆಸ್ನ ತಂತ್ರ ಸಫಲಾವಾಗಿದ್ದು, ಚದುರುತ್ತಿದ್ದ ಮತಗಳು ಒಂದಡೆಯಾಗಲಿವೆ ಎಂಬುವುದು ಕಾಂಗ್ರೆಸ್ನ ಚಿಂತನೆಯಾಗಿದೆ.