ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು
ಪ್ರತಿನಿಧಿ ವರದಿ ಮೈಸೂರು
ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಎಲ್ಲ 65 ಪ್ರಕರಣಗಳು ಇತ್ಯರ್ಥವಾಗಿದ್ದು, ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಅಧಿಕಾರಿಗಳು ಸೇವೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ರೈತರ ಆತ್ಮಹತ್ಯೆ ಸಂಬಂಧ ನಡೆದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರೈತ ಆತ್ಮಹತ್ಯೆ ಪ್ರಕರಣ ಕಂಡುಬಂದಲ್ಲಿ 24 ಗಂಟೆಯೊಳಗೆ ಆಯಾ ತಾಲೂಕಿನ ತಹಸೀಲ್ದಾರ್ ಹಾಗೂ ಸಮಿತಿಯವರು ಸ್ಧಳಕ್ಕೆ ಭೇಟಿ ನೀಡಿ, ವರದಿ ನೀಡಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ರೈತ ಕುಟುಂಬಕ್ಕೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದರು.
ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಕ್ಕೆ ವಿಶೇಷ ಸೌಲಭ್ಯಗಳನ್ನು ನೀಡಬೇಕು ಹಾಗೂ ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಕ್ಕೆ ನೀಡುತ್ತಿರುವ ವಿಶೇಷ ಸೌಲಭ್ಯಗಳಾದ ಮೃತ ರೈತರ ಪತ್ನಿಗೆ 2000 ರೂ. ಮಾಸಾಶನ, ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ಹಾಗೂ ಆತ್ಮಹತ್ಯೆ ಮಾಡಿಕೊಂಡು ಮೃತರಾದ ರೈತರ ಕುಟುಂಬಗಳಗೆ ವಿಶೇಷ ಆರೋಗ್ಯ ಯೋಜನೆಗಳ ಸೌಲಭ್ಯಗಳು ದೊರೆಯುವಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ನಂದಿನಿ, ಜಿಲ್ಲಾ ಸಹಕಾರ ನಿಬಂಧಕರು, ಜಿಲ್ಲಾ ವೈಧ್ಯಾಧಿಕಾರಿಗಳು, ಜಿಲ್ಲಾ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
================