ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಾಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್ ನೊಟೀಸ್ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುವುದಾಗಿ ಅವರು ಹೇಳಿದರು.
ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.20 ಲಕ್ಷ ರೂಪಾಯಿ ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಹಿಂದೆ ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.20 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ.
ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳು ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್ ಕಂಬ, ಟ್ರಾನ್ಸ್ಫಾರ್ಮರ್ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.