ಜಗದೀಶ್ ಕಬ್ಬಿನಹಳ್ಳಿ ಅಭಿಪ್ರಾಯ
ಪ್ರತಿನಿಧಿ ವರದಿ ಆಲೂರು
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿವೆ ಎಂದು ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್ ತಿಳಿಸಿದರು.
ಕಸಬಾ ಬೈರಾಪುರ ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಂತರ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳು ರಾಷ್ಟ್ರೀಕೃತ ಬ್ಯಾಂಕುಗಳಿಗೆ ತೀವ್ರ ಪೈಪೋಟಿ ನೀಡುತ್ತಿವೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಸಂಘಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು. ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜತೆ ವ್ಯವಹರಿಸಬೇಕಾದ ಪರಿಸ್ಥಿತಿ ಇದ್ದುದ್ದರಿಂದ, ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಬೈರಾಪುರ ಗ್ರಾಮದಲ್ಲಿ ಹೊಸದಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತೆರೆಯಲಾಗಿದೆ. ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಸರ್ಕಾರ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತಿರುವುದನ್ನು ಕೃಷಿ ಚಟುವಟಿಕೆಗಳಿಗೆ ಮಾತ್ರ ಬಳಸಿಕೊಳ್ಳಬೇಕು. ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡಿ ಸಂಘದ ಪ್ರಗತಿಗೆ ಸಹಕರಿಸಬೇಕು ಎಂದರು.
ಅಧ್ಯಕ್ಷರಾಗಿ ಸಿ.ಡಿ.ಅಶೋಕ್, ಉಪಾಧ್ಯಕ್ಷರಾಗಿ ಆಶಾರಾಣಿ ಅವಿರೋಧವಾಗಿ ಆಯ್ಕೆಯಾದರು. ಕೃಷ್ಣೇಗೌಡ, ಬಿ.ಕೆ.ಗಿರೀಶ್, ಜಯರಾಮ್, ಶಾರದಮ್ಮ, ಮಧುಕುಮಾರ್, ಎಸ್. ಎನ್.ನಂಜೇಗೌಡ, ಸಿ.ಎಂ.ಪಾಲಾಕ್ಷ ಅವರು ನಿರ್ದೇಶಕರಾಗಿ ಆಯ್ಕೆಯಾದರು. ಚುನಾವಣಾಧಿಕಾರಿಗಳಾಗಿ ಕುಮಾರ್ ಹಾಗೂ ಎಚ್.ಡಿ.ಸಿ.ಸಿ ಬ್ಯಾಂಕ್ ವಿಸ್ತರಣಾಧಿಕಾರಿ ರಾಘವೇಂದ್ರ ಕಾರ್ಯನಿರ್ವಹಿಸಿದರು.