ಇಂದು ಸಿಎಂ ಸಿದ್ದರಾಮಯ್ಯ ನಾಡಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿದ್ದರಾಮಯ್ಯ ಹೆಸರಿನಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆಯನ್ನ ನೆರವೇರಿಸಿದ್ದು, ಭಕ್ತಿಯಿಂದ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದ ಸಿಎಂ ಬಳಿಕ ಚಾಮುಂಡೇಶ್ವರಿ ಪಾದುಕೆಗೆ ನಮಸ್ಕರಿಸಿದ್ದಾರೆ. ಈ ವೇಳೆ ಚಾಮುಂಡಿ ದೇವಾಲಯದ ಪ್ರಮುಖ ಅರ್ಚಕರು ಸಿದ್ದರಾಮಯ್ಯ ಹಣೆಗೆ ಕುಂಕುಮ ಇಟ್ಟಿದ್ದಾರೆ.
ನಂತರ ದೇವಾಲಯದ ಒಳಾಂಗಣದಲ್ಲಿರುವ ಗಣಪತಿ, ಆಂಜನೇಯ ಸೇರಿದಂತೆ ಇತರ ದೇವರ ಬಳಿಯೂ ಪ್ರಾರ್ಥನೆ ಸಲ್ಲಿಸಿದ ಅವರು, ಬಳಿಕ ಚಾಮುಂಡೇಶ್ವರಿ ದೇಗುಲದ ಮುಂಭಾಗದಲ್ಲಿ ಈಡುಗಾಯಿ ಒಡೆದು ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.
ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಬಳಿಕ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಅಭಿವೃದ್ಧಿ ಪ್ರಾಧಿಕಾರದ ಸಭೆ ಆಯೋಜನೆ ಮಾಡಲಾಗಿದೆ.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ, ಕೆ ವೆಂಕಟೇಶ್, ಎಚ್ ಕೆ ಪಾಟೀಲ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ, ಶಾಸಕರಾದ ಕೆ ಹರೀಶ್ ಗೌಡ, ಡಿ ರವಿಶಂಕರ್ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು.