ಪ್ರತಿನಿಧಿ ವರದಿ ಮೈಸೂರು
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮೈಸೂರಿನಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿಯಿದ್ದ 6,505 ಪ್ರಕರಣಗಳು ತೀರ್ಮಾನವಾಗಿದೆ.
ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಮೈಸೂರು ನಗರ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ 58,688 ಸಿವಿಲ್ ಹಾಗೂ 60,286 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು 1,18,974 ಪ್ರಕರಣಗಳು ವಿಚಾರಣೆಗೆ ಬಾಕಿಯಿತ್ತು. ಇವುಗಳಲ್ಲಿ 19,363 ರಾಜಿಯಾಗಬಹುದಾದ ಪ್ರಕರಣಗಳಿದ್ದು, ಅವುಗಳ ಪೈಕಿ 9,126 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜಿ ಸಂಧಾನಕ್ಕೆ ತೆಗೆದುಕೊಂಡ ಪ್ರಕರಣಗಳಲ್ಲಿ 6,505 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.
ಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ 31 ದಂಪತಿಗಳು ತಮ್ಮ ಮಧ್ಯದ ವಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾಗಿದ್ದಾರೆ. ಈ ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ಮೂಲಕ ಒಟ್ಟು 36,36,02,361 ರೂ.ಗಳು ಇತ್ಯರ್ಥವಾಗಿದೆ. ಈ ಯಶಸ್ಸಿಗೆ ಸಹಕಾರ ನೀಡಿದ ವಕೀಲರ ಸಂಘದ ಪದಾಧಿಕಾರಿಗಳು, ವಕೀಲರು, ಕಕ್ಷಿಗಾರರು, ಪೊಲೀಸ್ ಇಲಾಖೆಯನ್ನೊಳಗೊಂಡಂತೆ ಎಲ್ಲ ಇಲಾಖೆಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.