ನಂಜನಗೂಡು: ಜಾತಿನಿಂದನೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮೈಸೂರು-ಊಟಿ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಶಾಸಕ ಮುನಿರತ್ನ, ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ವಿವಿಧ ಧಿಕ್ಕಾರದ ಘೋಷಣಾ ಫಲಕಗಳನ್ನಿಡಿದಿದ್ದ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಅವರ ಭಾವಚಿತ್ರ ಹಾಗೂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚುವ ಮೂಲಕ ಪ್ರತಿಕೃತಿ ದಹಿಸಿ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆಯಿಂದಾಗಿ ಕೆಲಕಾಲ ಮೈಸೂರು-ಊಟಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಒಬ್ಬ ಜವಾಬ್ದಾರಿಯುತ ಶಾಸಕ ಈ ರೀತಿ ಜಾತಿ ಜಾತಿಗಳ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಸರ್ಕಾರ ಅವರನ್ನು ಬಂಧಿಸಿರುವುದು ಸ್ವಾಗತಾರ್ಹ. ಆದರೆ ಬಿಜೆಪಿ ಮತ್ತು ಪಕ್ಷದ ವರಿಷ್ಠರು ಕೂಡಲೇ ಇವರನ್ನು ಪಕ್ಷದಿಂದ ಉಚ್ಚಾಟಿಸಿ ಶಾಸಕ ಸ್ಥಾನದಿಂದಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷೆ ರಿಯಾನಬಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್, ಅಶೋಕ್ , ಸೇರಿದಂತೆ ಮುಖಂಡರುಗಳಾದ ನಂದಕುಮಾರ್, ಮಂಜುನಾಥ್, ದೊರೆಸ್ವಾಮಿ, ಶ್ರೀಧರ್, ಸೌಭಾಗ್ಯ, ಮೀನಾಕ್ಷಿ, ಶಿವಣ್ಣ, ಬಾಲರಾಜ್, ಪುಟ್ಟಸ್ವಾಮಿ ಸೇರಿದಂತೆ ನೂರಾರು ಕಾರ್ಯಕರ್ತ ಮುಖಂಡರುಗಳು ಭಾಗವಹಿಸಿದ್ದರು.