ಮಡಿಕೇರಿ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 5 ನೇ ಸುತ್ತಿನಲ್ಲಿ ಏ. 1 ರಿಂದ 30 ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.
ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ರೋಗವು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ ಎಂದರು.
ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು, ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮಥ್ರ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ ಎಂದು ಮಾಹಿತಿ ನೀಡಿದರು.
ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ಧ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬರದಂತೆ ತಡೆಗಟ್ಟಬಹುದಾಗಿದೆ ಎಂದು ಲಿಂಗರಾಜ ದೊಡ್ಡಮನಿ ಅವರು ತಿಳಿಸಿದರು.
Leave a comment