ಮಧ್ಯಪ್ರದೇಶ, ಛತ್ತೀಸ್ಗಢ ಹಾಗೂ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಬಿಜೆಪಿಯ 10 ಮಂದಿ ಸಂಸದರು ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬುಧವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಸಭೆಯ ಬಳಿಕ ಈ ತೀರ್ಮಾನ ಮಾಡಿದ್ದಾರೆ. ಸಂಸದರಾದ ನರೇಂದ್ರ ಸಿಂಗ್ ತೋಮರ್, ಪ್ರಲ್ಹಾದ್ ಸಿಂಗ್ ಪಟೇಲ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಹಾಗೂ ರಿತಿ ಪಾಠಕ್ ಮಧ್ಯಪ್ರದೇಶ ಚುನಾವಣೆಯಲ್ಲಿ ಗೆಲುವು ಕಂಡಿದ್ದರೆ, ಅರುಣ್ ಸಾವೋ ಹಾಗೂ ಗೋಮತಿ ಸಾಯಿ ಛತ್ತೀಸ್ಗಢ ವಿಧಾನಸಭೆಯಲ್ಲಿ ಗೆಲುವು ಸಾಧಿಸಿದ್ದರು. ಇನ್ನು ಮಾಜಿ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್, ದಿಯಾ ಕುಮಾರಿ ಹಾಗೂ ಕಿರೋಡಿ ಲಾಲ್ ಮೀನಾ ರಾಜಸ್ಥಾನದ ಚುನಾವಣೆಯಲ್ಲಿ ಗೆಲುವು ಕಾಣುವ ಮೂಲಕ ವಿಧಾನಸಭೆಗೆ ಆಯ್ಕೆಯಾಗಿದ್ದರು.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ತೆಲಂಗಾಣದಲ್ಲಿ ಎಂಟು ಸ್ಥಾನಗಳನ್ನು ಗೆದ್ದಿದೆ. ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 21 ಸಂಸದರಿಗೆ ಟಿಕೆಟ್ ನೀಡಿತ್ತು. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ತಲಾ ಏಳು ಸಂಸದರು ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅದೇ ಸಮಯದಲ್ಲಿ ಛತ್ತೀಸ್ಗಢದಲ್ಲಿ ನಾಲ್ವರು ಮತ್ತು ತೆಲಂಗಾಣದಲ್ಲಿ ಮೂವರಿಗೆ ವಿಧಾನಸಭೆಯಲ್ಲಿ ಟಿಕೆಟ್ ನೀಡಲಾಗಿತ್ತು. ಇದೀಗ ಬಿಜೆಪಿ ಹೈಕಮಾಂಡ್ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಸಂಸದರನ್ನು ಭೇಟಿ ಮಾಡಿ ಸಂಸತ್ ಸದಸ್ಯತ್ವ ತೊರೆಯುವಂತೆ ಸೂಚನೆ ನೀಡಿದೆ.