ರಾಮನಗರ: ಲೋಕಸಭೆಗೆ ಸಾರ್ವತ್ರಿಕ ಚುನಾವಣೆಯು ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಏ.26ರಂದು ಹಾಗೂ ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದ ಮತದಾನ ಮೇ 7ರಂದು ನಡೆಯಲಿದೆ.
ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ, ಪ್ರಜಾಪ್ರತಿನಿಧಿ ಕಾಯ್ದೆಯಡಿ ವೇತನ ಸಹಿತ ರಜೆ ನೀಡಬೇಕು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.