ಚಾಮರಾಜನಗರ ಅ.07: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು ಸೋಲುಕಂಡಿದ್ದು, ರಾಜಕಾರಣದಲ್ಲಿ ಅಚ್ಚರಿ ಮೂಡಿಸಿತ್ತು. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸೋಲುಂಡ ಬಳಿಕ ತರೆಮರೆಯಲ್ಲಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಅಷ್ಟೋಂದು ಆ್ಯಕ್ಟಿವ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಈ ಮಧ್ಯೆ ಶ್ರೀರಾಮುಲು ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಿಂದ ಕೇಳಿಬುರತ್ತಿತ್ತು. ಆದರೆ ಇದಕ್ಕೆ ಖುದ್ದು ಬಿಜೆಪಿ ನಾಯಕ ಬಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಸ್ಪರ್ಧಿಸುವುದರ ಕುರಿತು ಯೋಚನೆ ಮಾಡಿಲ್ಲ. ನಾನು ಸ್ಪರ್ಧಿಸುವ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ನೀಡುತ್ತಾರೆ ಅವರ ಪರವಾಗಿ ನಾವು ಕೆಲಸ ಮಾಡುತ್ತೇವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 25ಕ್ಕೂ ಅಧಿಕ ಸ್ಥಾನವನ್ನ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಎಸ್ಟಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿದ ಅವರು ಇದು ಅವರ ಪಕ್ಷದ ಆಂತರಿಕ ವಿಚಾರ ನಾನು ಪ್ರಶ್ನೆ ಮಾಡುವುದಿಲ್ಲ. ಸೂಕ್ತ ಸ್ಥಾನ ಮಾನ ನೀಡುವುದು ಅವರಿಗೆ ಬಿಟ್ಟ ವಿಚಾರ ಎಂದರು.