ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಆದೇಶ ರದ್ದುಗೊಳಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೆ ಇದೀಗ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್, ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ.ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನ, ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಮಾನ್ಯ ಹೈಕೋರ್ಟ್ ನ ತೀರ್ಪು ಇಡೀ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ.ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.