ಬೆಂಗಳೂರು : ನಗರತ್ ಪೇಟೆಯಲ್ಲಿನ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಅಂಗಡಿ ಮಾಲಿಕನ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಘಟನಾ ಸ್ಥಳದಲ್ಲಿ ಹನುಮ ಭಕ್ತರು ಜಾಥ ನಡೆಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಇನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ಕೆಪಿಸಿಸಿ ಕಾನೂನು ಘಟಕ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿಸುಬ್ರಮಣ್ಯ ಅವರು ಮಾರ್ಚ್ 18 ರಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಅಂಗಡಿಯ ಮುಂದೆ ಗುಂಪು ಸೇರಿಸಿ ಇಂದು ಮಧ್ಯಾಹ್ನ 12 ಗಂಟೆಗೆ ಹನುಮಾನ್ ಚಾಲೀಸ ಪಠಣೆ ಮಾಡಲು ಕರೆ ನೀಡಿದ್ದಾರೆ. ಅಲ್ಲದೇ ಧಾರ್ಮಿಕ ಘೋಷಣೆಗಳನ್ನು ಕೂಗಿರುತ್ತಾರೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಚುನಾವಣಾ ಆಯೋಗದ ಪ್ರಕಾರ, ಚುನಾವಣೆಯ ಸಂದರ್ಭದಲ್ಲಿ ಕೋಮು, ಮತ, ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತಹ ಕೃತ್ಯವೆಸಗುವುದು ಅಪರಾಧ. ನೀತಿ ಸಂಹಿತೆ ಉಲ್ಲಂಘಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹೀಗಾಗಿ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ದೂರು ನೀಡಿದೆ.