ಮೈಸೂರು : ನಾವು ಕೂಲಿ ಮಾಡಿದ್ದೇವೆ, ಕೂಲಿಗೆ ಸಂಬಳ ಕೇಳುತ್ತೇವೆ. ಅಭಿವೃದ್ಧಿಯ ಮೇಲೆ ಜನರ ಬಳಿ ಮತ ಕೇಳುತ್ತೇವೆ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹೇಳಿದರು. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಂವಾದದಲ್ಲಿ ಮಾತನಾಡಿದ ಎಂ.ಲಕ್ಷ್ಮಣ್, ಕಾಂಗ್ರೆಸ್ ಪಕ್ಷ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದೆ. ಕಾಂಗ್ರೆಸ್ ಪಕ್ಷದ ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ. 47 ವರ್ಷಗಳ ಬಳಿಕ ಒಕ್ಕಲಿಗ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿದೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ 24/7 ಕೆಲಸ ಮಾಡುವ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ನ ಹಿರಿಯ ಶಾಸಕ ತನ್ವೀರ್ ಸೇಠ್ ಮಾರ್ಗದರ್ಶನದಲ್ಲಿ ನಡೆಯುತ್ತೇನೆ. ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರ ಸಹಕಾರದೊಂದಿಗೆ ಮುಂದೆ ಸಾಗುತ್ತೇನೆ ಎಂದರು.