ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲು ಮತ್ತೆ ಸುಪ್ರೀಂ ಕೋರ್ಟ್(Supreme Court) ಆದೇಶ ಕೊಟ್ಟಿದೆ. ಈ ಹಿನ್ನೆಲೆ ಬೆಂಗಳೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ(Cauvery Water Dispute) . ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯಲಿದೆ. ಹಾಗೂ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಕೆಆಸ್ಎಸ್ ಪಕ್ಷ ಕರೆ ಕೊಟ್ಟಿದೆ. ಮಂಡ್ಯದ ಸಂಜಯ್ ಸರ್ಕಲ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ.
ಕಾವೇರಿಗಾಗಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರವೇ ಅಧ್ಯಕ್ಷ ನಾರಾಯಣಗೌಡ ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸಬಾರದು. ಕಾವೇರಿ ನೀರು ಹರಿಸುವುದನ್ನ ಕೂಡಲೇ ನಿಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ಕೊಟ್ಟಿದೆ. ಇಂದು 12 ಗಂಟೆಗೆ ಕರವೇ ನಾರಯಣಗೌಡ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.