ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೈತ್ರಿ ಟಿಕೆಟ್ ಸಿಗದ ಹಿನ್ನೆಲೆ ಸಿಪಿ ಯೋಗೇಶ್ವರ್ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು. ಇದೀಗ ರಜ್ಯರಾಜಕೀಯದಲ್ಲಿ ದಿಢೀರ್ ಬೆಳವಣಿಗೆಯಾಗಿದ್ದು, ಸಿಪಿವೈ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.
ಮಾಜಿ ಸಚಿವ ಸಿಪಿ ಯೋಗೇಶ್ವರ್ ಇದೀಗ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ವಾಟ್ಸ್ ಆ್ಯಪ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಕಾಣಿಕೊಂಡು ಅಚ್ಚರಿ ಮೂಡಿಸಿದ ಸಿಪಿ ಯೋಗೇಶ್ವರ್ ನಂತರ ಡಿಕೆಶಿ ಜೊತೆಯಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಅವರ ಜತೆ ಸಿಎಂ ಸಿದ್ದರಾಮಯ್ಯ ಅವರನ್ನು “ಕಾವೇರಿ”ಯಲ್ಲಿ ಬುಧವಾರ ಭೇಟಿ ಮಾಡಿದರು. ಅಲ್ಲದೆ ಇಂದು ಸಿಪಿವೈ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.
ಸಚಿವರಾದ ಜಮೀರ್ ಅಹ್ಮದ್ ಖಾನ್, ಶಿವರಾಜ್ ತಂಗಡಗಿ, ಶಾಸಕರಾದ ಕದಲೂರು ಉದಯ್, ಪೊನ್ನಣ್ಣ, ಯತೀಂದ್ರ ಸಿದ್ದರಾಮಯ್ಯ ಇದೇ ವೇಳೆ ಹಾಜರಿದ್ದರು.