ನವದೆಹಲಿ, ಸೆ.19: ಲೋಕಸಭೆಯಲ್ಲಿ ಶೇ.33 ರಷ್ಟು ಮಹಿಳಾ ಮೀಸಲಾತಿ ಬಿಲ್ ಮಂಡಿಸಲಾಗಿದೆ. ಈ ಬಗ್ಗೆ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ಬಿಲ್ ಮಂಡನೆ ನಂತರ ತಮ್ಮ ಸಾಧನೆ ಎಂದು ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದರೆ, ಇತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಮೀಸಲಾತಿ ಕ್ರೆಡಿಟ್ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ಹೇಳುತ್ತಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, 2010 ರಲ್ಲಿ ನಾವು ಮಹಿಳಾ ಮೀಸಲಾತಿ ಬಿಲ್ ಮಂಡಿಸಿದ್ದೆವು. ಹೀಗಾಗಿ ಇದರ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದಿದ್ದಾರೆ. ಮಹಿಳಾ ಮೀಸಲಾತಿ ಬಿಲ್ನಲ್ಲಿ ಒಬಿಸಿ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿದರು. ಇದಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.