ನವದೆಹಲಿ: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ನಿನ್ನೆ (ಅಕ್ಟೋಬರ್ 15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Election Commissioner Rajeev Kumar) ಸುದ್ದಿಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ(ರಾಮನಗರ) ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ಗಜೆಟ್ ನೋಟಿಫಿಕೇಶನ್ ಅಕ್ಟೋಬರ್ 18ರಂದು ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ಪರಿಶೀಲನೆ ಅಕ್ಟೋಬರ್ 28ಕ್ಕೆ ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಅಕ್ಟೋಬರ್ 30 ಕೊನೆಯ ದಿನವಾಗಿದೆ. ನವೆಂಬರ್ 13ರಂದು ಮೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.