ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಗೋಪ್ಯವಾಗಿ ಯೋಜನೆ ರೂಪಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ಚೆನ್ನಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಹಾಗೂ ರಾಜ್ಯದಲ್ಲಿ ಗುರುವಾರ ಒಂದೇ ದಿನ 12ಕ್ಕೂ ಹೆಚ್ಚು ಹತ್ಯೆಗಳಾದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಟೀಕಿಸಿತ್ತು. ಇದಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನೇಹಾ ಹಿರೇಮಠ್ರನ್ನು ಫಯಾಜ್ ಚಾಕುವಿನಿಂದ ಇರಿದು ಕೊಂದಿದ್ದ.
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಅದನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದ ಸಿದ್ದರಾಮಯ್ಯ, ‘ವೈಯಕ್ತಿಕ ಕಾರಣದಿಂದ’ ನೇಹಾ ಕೊಲೆಯಾಗಿದೆ ಎಂದು ಹೇಳಿದ್ದಾರೆ.