ಪ್ರತಿನಿಧಿ ವರದಿ ಚಾಮರಾಜನಗರ
ಜಿಲ್ಲಾಡಳಿತದ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮಗಳನ್ನು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಆಚರಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಎಡಿಸಿ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಗೀತಾ ಹುಡೇದ್ ಅವರು , ಮೊದಲಿಗೆ ಡಾ. ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಚರಣೆ ಸಂಬಂಧ ಸಭೆಯಲ್ಲಿ ಹಾಜರಿದ್ದ ಸಮುದಾಯದ ಮುಖಂಡರು, ವಿವಿಧ ಸಂಘಸಂಸ್ಥೆಗಳು ಹಾಗೂ ಸಂಘಟನೆಗಳ ಪದಾಧಿಕಾರಿಗಳ ಸಲಹೆ, ಅಭಿಪ್ರಾಯ, ಅನಿಸಿಕೆಗಳನ್ನು ಆಲಿಸಿದರು.
ಬಳಿಕ ಮಾತನಾಡಿ, ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಇಬ್ಬರು ರಾಷ್ಟ್ರನಾಯಕರ ಜಯಂತಿ ಕಾರ್ಯಕ್ರಮಗಳನ್ನು ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಉಲ್ಲಂಘನೆಯಾಗದ ರೀತಿಯಲ್ಲಿ ಹಾಗೂ ರಾಜಕೀಯ ರಹಿತವಾಗಿ, ಸದಾಚಾರ ಸಂಹಿತೆಗಳನ್ನು ಪಾಲಿಸಿ ಆಚರಣೆ ಮಾಡಲಾಗುವುದು ಎಂದರು.
ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಏ. 5ರಂದು ನಗರದ ಶ್ರೀ ಚಾಮರಾಜೇಶ್ವರ ದೇವಾಲಯದಿಂದ ವಿವಿಧ ಕಲಾತಂಡಗಳನ್ನೊಳಗೊಂಡು ಬೆಳ್ಳಿರಥದಲ್ಲಿ ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬಳಿಕ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಪನ್ಯಾಸವು ಸಹ ಇರಲಿದೆ ಎಂದು ತಿಳಿಸಿದರು.
ಏ.14ರಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಗ್ಗೆ ನಗರದ ಪ್ರವಾಸಿ ಮಂದಿರದಿಂದ ವಿವಿಧ ಕಲಾತಂಡಗಳನ್ನೊಳಗೊಂಡು ಬೆಳ್ಳಿರಥದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ನಂತರ ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಷ ಉಪನ್ಯಾಸ ಸೇರಿದಂತೆ ಇತರೆ ಕಾರ್ಯಕ್ರಮಗಳು ನಡೆಯಲಿವೆ. ಈ ಎರಡು ಕಾರ್ಯಕ್ರಮಗಳಿಗಾಗಿ ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೈಗೊಳ್ಳಬೇಕು ಎಂದು ತಿಳಿಸಿದರು.
ಡಿವೈಎಸ್ಪಿ ಲಕ್ಷ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಜಿಲ್ಲಾಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು, ವಿವಿಧ ಸಂಘಸಂಸ್ಥೆಗಳು, ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಇದ್ದರು.
2ಸಿಎಚ್ಎನ್.2:
ಚಿತ್ರವಿದೆ