ಮಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನು ಒಂದೇ ದಿನ ಬಾಕಿ ಇದ್ದು, ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹೆಸರಿನಲ್ಲಿ ಜಾತಿ ಪತ್ರವೊಂದು ವೈರಲಾಗಿದೆ. ಆದರೆ, ಇದು ನಕಲಿ ಎಂದು ಹೇಳಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದೆ. ಜತೆಗೆ, ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದೆ. ನಕಲಿ ಪತ್ರ ಹರಿಯಬಿಟ್ಟು ಪಕ್ಷದ ಅಭ್ಯರ್ಥಿಗೆ ಹಿನ್ನಡೆ ಉಂಟು ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಕಾಂಗ್ರೆಸ್ ಚುನಾವಣೆಗೆ ಮುನ್ನವೇ ಸೋಲೊಪ್ಪಿಕೊಂಡಿದೆ ಎಂದಿದೆ.
ದಕ್ಷಿಣ ಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪ್ರಭಾವಿ ಬಂಟ ಸಮುದಾಯಕ್ಕೆ ಸೇರಿದವರು. ಹೀಗಾಗಿ ಬಂಟ ಬ್ರಿಗೇಡ್ ಹೆಸರಿನಲ್ಲಿ ಜಾತಿ ಪತ್ರವನ್ನು ವೈರಲ್ ಮಾಡಲಾಗಿದೆ.
ವೈರಲ್ ಆಗಿರುವ ಪತ್ರದಲ್ಲಿ ಏನಿದೆ?
‘ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬಂಟ ಸಮುದಾಯದವರು. ನಮ್ಮ ಸಮುದಾಯದ ಅಭ್ಯರ್ಥಿಯನ್ನು ಗೆಲ್ಲಿಸಿ. ಇತರ ಶೂದ್ರ ಸಮುದಾಯಗಳು ಮೆರೆಯದಂತೆ ನೋಡಿಕೊಳ್ಳಿ’ ಎಂದು ವೈರಲ್ ಆದ ಪತ್ರದಲ್ಲಿದೆ. ಬಿಲ್ಲವ ಸಮುದಾಯವನ್ನು ಟಾರ್ಗೆಟ್ ಮಾಡಿ ಪತ್ರ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಇಲ್ಲವ ಸಮುದಾಯಕ್ಕೆ ಸೇರಿದವರು ಎಂಬುದು ಗಮನಾರ್ಹ.