ಮಂಡ್ಯ: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರುತ್ತಿರುವ ಹಾಗೆ ಲೋಕಸಭೆ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ನಾಮಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿದ್ದು, 28 ಲೋಕಸಭಾ ಕ್ಷೇತ್ರಗಳಿಗೆ 183 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತದೆ. ಇಂದಿನಿಂದ ಪ್ರಚಾರದ ಭರಾಟೆ ಜೋರಾಗುತ್ತದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ ಪರವಾಗಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರಚಾರ ಆರಂಭಿಸಿದ್ದಾರೆ. ತಾಲೂಕು, ಹೋಬಳಿ ಮತ್ತು ಗ್ರಾಮಗಳ ಮಟ್ಟದಲ್ಲಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಪ್ರಚಾರ ಸಭೆಗಳಲ್ಲಿ ಕಾರ್ಯಕರ್ತರು ಹೆಚ್ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿದರೆ ಮೋದಿ ಸರ್ಕಾರದಲ್ಲಿ ಅವರು ಕೇಂದ್ರ ಸಚಿವರಾಗುತ್ತಾರೆ. ಅದೆ ಸ್ಟಾರ್ ಚಂದ್ರು ಅವರಿಗೆ ಮತ ಹಾಕಿದರೆ ಕೇವಲ ಸಂಸದರಾಗಿರುತ್ತಾರೆ ಎಂದು ಪ್ರಚಾರ ಮಾಡುತ್ತಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಕೃಷಿ ಖಾತೆ ನೀಡುವುದು ಪಕ್ಕಾ. ಕೇಂದ್ರ ಸಚಿವರಾದರೆ ಮಂಡ್ಯ ಸಾಕಷ್ಟು ಅಭಿವೃದ್ಧಿಯಾಗುತ್ತದೆ. ಮಂಡ್ಯ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ಕಾವೇರಿ ಸಮಸ್ಯೆಗೂ ಪರಿಹಾರ ಸಿಗುತ್ತದೆ. ಹೀಗಾಗಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿ ಎಂದು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷದ ಕಾರ್ಯಕರ್ತರು ಜನರಿಗೆ ಹೇಳುತ್ತಿದ್ದಾರೆ. ಈ ಮೂಲಕ ಭಾವನಾತ್ಮಕವಾಗಿ ಮತ ಸೆಳೆಯಲು ದೋಸ್ತಿಗಳ ಮೆಗಾ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.