ಜಮ್ಮು ಕಾಶ್ಮೀರ : ಆರ್ಟಿಕಲ್ 370 ರದ್ದಾದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರ ರಾಜ್ಯಕ್ಕೆ ಬರೋಬ್ಬರಿ 6400 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಕೊಡುಗೆಯಾಗಿ ನೀಡಲಿದ್ದು, 1000 ಯುವಕರಿಗೆ ಉದ್ಯೋಗ ನೇಮಕಾತಿ ಪತ್ರ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮೋದಿ ಮಾತನಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆರ್ಟಿಕಲ್ 370 ರದ್ದಾದ ನಂತರ ಕಾಶ್ಮೀರಕ್ಕೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದ್ದು, ಈ ಹಿಂದೆ 2019ರಲ್ಲಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದರು. ಸದ್ಯ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಈ ಸಾರ್ವಜನಿಕ ಸಭೆಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ಭದ್ರತಾ ಪಡೆಗಳು ಹದ್ದಿನ ಕಣ್ಣಿಟ್ಟು ರಕ್ಷಣಾ ವ್ಯವಸ್ಥೆಯನ್ನು ಕೈಗೊಂಡಿದೆ ಎಂದು ತಿಳಿದು ಬಂದಿದೆ.