ಅಧಿಕಾರಿಗಳಿಗೆ ರಾಜೇಂದರ್ ಕುಮಾರ್ ಕಟಾರಿಯಾ ಸೂಚನೆ
ಪ್ರತಿನಿಧಿ ವರದಿ ಚಿಕ್ಕಮಗಳೂರು
ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿಯನ್ನು ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಸೂಚಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಕೆರೆಗಳ ಸರ್ವೇ ನಡೆಸಿ ಒತ್ತುವರಿಯಾಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಕ್ರಮವಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ ಇನ್ನೂ ಒತ್ತುವರಿ ತೆರವುಗೊಳಿಸುವ ಕಾರ್ಯ ಜಿಲ್ಲೆಯಲ್ಲಿ ಪೂರ್ಣಗೊಂಡಿಲ್ಲ. ಜಿಪಂ ವ್ಯಾಪ್ತಿಯಲ್ಲಿ, ಸಣ್ಣ ನೀರಾವರಿ ವ್ಯಾಪ್ತಿಯಲ್ಲಿರುವ ಕೆರೆಗಳ ಸರ್ವೇ ಕಾರ್ಯಕೈಗೊಂಡು ಒಂದು ವಾರದಲ್ಲಿ ಪೂರ್ಣಗೊಳಿಸುವಂತೆ ಹೇಳಿದ ಅವರು, ಕೆರೆಗಳ ಸುತ್ತ ಬಯೋ ಸ್ಪೆನ್ಸಿಂಗ್ ಮಾಡುವಂತೆ ತಿಳಿಸಿದರು.
ಶಾಲಾ ಕಟ್ಟಡ, ಅಂಗನವಾಡಿ, ಆಸ್ಪತ್ರೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಕಟ್ಟಡದ ಗುಣಮಟ್ಟ ಪರಿಶೀಲಿಸಿ ವರದಿ ನೀಡಬೇಕು. ಕಟ್ಟಡಗಳ ದುರಸ್ತಿ ಕಾರ್ಯವಿದ್ದರೆ ತಕ್ಷಣ ದುರಸ್ತಿ ಪಡಿಸುವಂತೆ ಕ್ರಮವಹಿಸಬೇಕು. ಮಳೆ, ಗಾಳಿಯಿಂದಾಗಿ ಮಲೆನಾಡು ಭಾಗದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿರುವ ಕುರಿತು ದೂರುಗಳು ಬರುತ್ತಿದ್ದು, ತಕ್ಷಣ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಜು.15ರಿಂದ 31ರವರೆಗೆ ಅತಿ ಹೆಚ್ಚು ಮಳೆ ಹಾಗೂ ಗಾಳಿಯಿಂದಾಗಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಈಗಾಗಲೇ ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಕಂಬಗಳನ್ನು ಸರಿಪಡಿಸುವ ಕೆಲಸವಾಗುತ್ತಿದೆ. ಏ.1ರಿಂದ ಇಲ್ಲಿಯವರೆಗೆ 5 ಮಾನವ, 5 ಜಾನುವಾರುಗಳ ಹಾನಿಯಾಗಿದೆ. 431 ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಪರಿಹಾರವನ್ನು ನೀಡಲಾಗಿದೆ. 27.09 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದ ಅವರು, ರೈತರಿಗೆ ಹವಾಮಾನಕ್ಕನುಗುಣವಾಗಿ ಬೆಳೆ ಬೆಳೆಯುವ ಕುರಿತು ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಮಾಹಿತಿ ನೀಡಲಾಗುತ್ತಿದೆ ಎಂದರು.
ಸಾರ್ವಜನಿಕರು ಆಸ್ತಿ ನೋಂದಣಿಯನ್ನು ಜಿಲ್ಲೆಯ ಯಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಾದರೂ ನೋಂದಣಿ ಮಾಡಿಕೊಳ್ಳಬಹುದು ಎಂದು ಉಸ್ತುವಾರಿ ಕಾರ್ಯದರ್ಶಿ ತಿಳಿಸಿದರು. ಮಳೆಯಿಂದಾಗಿ ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿಗಳಾದ ದಲ್ಜಿತ್ ಕುಮಾರ್, ಕಾಂತರಾಜು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.