ಪ್ರತಿನಿಧಿ ವರದಿ ಗೋಣಿಕೊಪ್ಪ
ಪೊನ್ನಂಪೇಟೆ ತಾಲೂಕಿನ ಮಂಚಳ್ಳಿ ರಸ್ತೆಯಲ್ಲಿ ಬರೆ ಕುಸಿದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಪರ್ಕ ಕಳೆದುಕೊಂಡವರಿಗೆ ತೂಗು ಸೇತುವೆ ನಿರ್ಮಿಸಿ, ರಸ್ತೆ ಸಂಪರ್ಕ ಕಲ್ಪಿಸಲು ಸೂಚನೆ ನೀಡಿದರು. ಸುಮಾರು 20 ಕುಟುಂಬಗಳು ಪರಿಹಾರಕ್ಕಾಗಿ ಮುಖ್ಯಮಂತ್ರಿ ಬಳಿ ಅಲವತ್ತುಕೊಂಡರು. ಅಧಿಕಾರಿಗಳು ಮತ್ತು ಸ್ಥಳೀಯರ ಜತೆ ಚರ್ಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬರೆ ಕುಸಿದಿರುವ ಜಾಗದಲ್ಲಿ ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜು, ಮುಖ್ಯಮಂತ್ರಿ ಕಾನೂನು ಸಲಹೆಗಾರರು, ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಆನೆಚೌಕೂರು ಮೂಲಕ ಆಗಮಿಸಿದ ಮುಖ್ಯಮಂತ್ರಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ ಸ್ವಾಗತಿಸಿಕೊಂಡರು.
ಫೋಟೋ 2 ಜಿಕೆಪಿ 01 ; ಪೊನ್ನಂಪೇಟೆ ತಾಲೂಕಿನ ಮಂಚಳ್ಳಿ ರಸ್ತೆಯಲ್ಲಿ ಬರೆ ಕುಸಿದ ಸ್ಥಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು.