ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಬೇಸರ
ಶಾಲಾ ಕೊಠಡಕ್ಕೆ ಶಾಸಕರಿಂದ ಚಾಲನೆ
ಪ್ರತಿನಿಧಿ ವರದಿ ಗುಂಡ್ಲುಪೇಟೆ
ಸರ್ಕಾರಿ ಶಾಲೆಗಳು ಕೂಡ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಸಲುವಾಗಿ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಕಲ್ಪಿಸಿದ್ದರೂ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರ್ಪಡೆ ಮಾಡದಿರುವುದು ವಿಷಾದಕರ ಸಂಗತಿ ಎಂದು ಶಾಸಕ ಗಣೇಶ್ ಪ್ರಸಾದ್ ಬೇಸರ ವ್ಯಕ್ತಪಡಿಸಿದರು.
ತಾಲೂಕಿನ ಬೊಮ್ಮಲಾಪುರ ಗ್ರಾಮದ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಯಲ್ಲಿ 14.50 ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಕೆಲಸಕ್ಕೆ ಶಾಸಕರು ಬುಧವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ಉಚಿತ ಶಿಕ್ಷಣ ವ್ಯವಸ್ಥೆ, ಸಮವಸ್ತ್ರ, ಪಠ್ಯ ಪುಸ್ತಕ, ಬೈಸಿಕಲ್, ಶೂ ವಿತರಣೆ, ಮಧ್ಯಾಹ್ನದ ಬಿಸಿ ಊಟ ಯೋಜನೆ, ಕಂಪ್ಯೂಟರ್ ಶಿಕ್ಷಣ ವ್ಯವಸ್ಥೆ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.
ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿದರೇ ಸಾಲದು. ಗ್ರಾಮದ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಿಸಲು ಶಿಕ್ಷಕರು ಸರ್ಕಾರಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಪೋಷಕರಿಗೆ ತಿಳಿಹೇಳುವ ಮೂಲಕ ಸರ್ಕಾರಿ ಶಾಲೆಗೆ ಕರೆತರುವ ಕಾಯಕ ಆಗಬೇಕು ಎಂದು ಸೂಚಿಸಿದರು.
ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ: ಮುಂದಿನ ದಿನಗಳಲ್ಲಿ ಎಲ್ಲ ಸರ್ಕಾರಿ ಶಾಲೆಯಲ್ಲೂ ಶಿಕ್ಷಕರು ಮಕ್ಕಳಿಗೆ ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೇರಣೆ ನೀಡಬೇಕು. ಅಲ್ಲದೇ ಶಾಲೆಯಲ್ಲಿ ಸ್ವಚ್ಛತೆಯ ಬಗ್ಗೆ ಮಾಹಿತಿ ಕೊಡಬೇಕು ಎಂದು ಸಲಹೆ ನೀಡಿದರು.
ಗುಣಮಟ್ಟ ಕಾಯ್ದುಕೊಳ್ಳಿ: ಬಿಸಿ ಊಟ ತಯಾರು ಮಾಡುವ ನೌಕರರು ಊಟ ತಯಾರು ಮಾಡುವ ಕೊಠಡಿಯ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಲ್ಲದೇ ಪಡಿತರ ಪದಾರ್ಥಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಂಡು ಹೋಗಬೇಕು. ಗುಣಮಟ್ಟದ ಕುಡಿಯುವ ನೀರನ್ನು ಮಕ್ಕಳಿಗೆ ನೀಡಬೇಕು ಎಂದು ಎಚ್ಚರಿಸಿದರು.
ಜಿಪಂ ಮಾಜಿ ಸದಸ್ಯ ಬಿ.ಕೆ.ಬೋಮ್ಮಯ್ಯ, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.