ಬೆಂಗಳೂರು : ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಕಂದಾಯ ಇಲಾಖೆ ಕೃಷ್ಣಭೈರೇಗೌಡ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ , ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಸರ್ಕಾರದ ವಕ್ತಾರರಾಗಿ ನೇಮಿಸಲಾಗಿದೆ. ಈ ಐವರು ಸಚಿವರಿಗೆ ದಾಖಲೆಗಳು ಹಾಗೂ ಮಾಹಿತಿಗಳನ್ನು ಕಾಲ ಕಾಲಕ್ಕೆ ಒದಗಿಸುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ವಿರೋಧ ಪಕ್ಷಗಳು ಮಾಡುವ ಆರೋಪಗಳಿಗೆ ಸೂಕ್ತ ರೀತಿಯಲ್ಲಿ ಉತ್ತರ ನೀಡಲು ಈ ಐವರಿಗೆ ಜವಾಬ್ದಾರಿ ನೀಡಲಾಗಿದೆ. ವಿರೋಧ ಪಕ್ಷಗಳು ಸರ್ಕಾರದ ಮೇಲೆ ಮಾಡುವ ಆರೋಪಗಳಿ ಮತ್ತು ಟೀಕೆಗಳಿಗೆ ಈ ಐವರು ಸಚಿವರು ಸದನದ ಒಳಗೆ ಮತ್ತು ಹೊರಗೆ ಎರಡೂ ಕಡೆ ಸೂಕ್ತ ರೀತಿಯಲ್ಲಿ ಪ್ರತ್ಯುತ್ತರ ನೀಡುತ್ತಲೇ ಬಂದಿದ್ದಾರೆ.