ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ಮಾಡಿ ಅಹವಾಲು ಆಲಿಸಿದರು. ಆಶಾ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗಳಿಗೆ ಈಗಿರುವ 5,000 ರೂ.ಗೆ ಬದಲಾಗಿ 7,000 ರೂ. ವರ್ಗಾವಣೆ ಮಾಡಲು ಕ್ರಮಕೈಗೊಳ್ಳಲಾಗುವುದು. ಹೀಗಾಗಿ ಪ್ರತಿಭಟನೆ ಹಿಂಪಡೆಯಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ. ಆದರೆ, ಪಟ್ಟು ಬಿಡದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳು ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಶೇ 50 ರಷ್ಟು ಆಶಾ ಕಾರ್ಯಕರ್ತೆಯರಿಗೆ ಅವರು ಮಾಡಿದ ಕೆಲಸಕ್ಕೆ ತಕ್ಕ ವೇತನ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿದ್ದಾರೆ. ಅಲ್ಲದೆ, ರಿಪ್ರೊಡಕ್ಟಿವ್ ಆ್ಯಂಡ್ ಚೈಲ್ಡ್ ಹೆಲ್ತ್ (ಆರ್ಸಿಎಚ್) ಪೋರ್ಟಲ್ ಅನ್ನು ಪಾವತಿ ಪ್ರಕ್ರಿಯೆಯಿಂದ ಡಿಲಿಂಕ್ ಮಾಡಿ, 15,000 ರೂ. ನಿಗದಿತ ಗೌರವಧನವಾಗಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.