ಬೆಂಗಳೂರು : ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವೊಲಿಸುವಲ್ಲಿ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಮುಂದಾಗಿದೆ. ಬಿಜೆಪಿಯಿಂದ ಸಂಸದ ಸುರೇಶ್ ವಿರುದ್ಧ ಸ್ಪರ್ಧೆ ಮಾಡಲು ಮಂಜುನಾಥ್ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಮಂಜುನಾಥ್ ಸ್ಪರ್ಧೆ ಸಂಬಂಧ ಮಂಗಳವಾರ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ದೆಹಲಿಯಲ್ಲಿ ಅಂತಿಮ ಮಾತುಕತೆ ನಡೆಸಲಿದ್ದಾರೆ. ಸ್ಪರ್ಧೆಗೆ ಮಂಜುನಾಥ್ ಒಪ್ಪಿಗೆ ನೀಡಿರುವ ಬಗ್ಗೆ ಕುಮಾರಸ್ವಾಮಿ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.