ಬೆಂಗಳೂರು : ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಹೊರಡಿಸಿದ್ದು, ಇದು ದೇಶದಾದ್ಯಂತ ಜಾರಿಯಾಗಬೇಕಿದೆ. ಈ ಮಧ್ಯೆ, ಪ್ರತಿಪಕ್ಷಗಳಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಮತ್ತೊಂದೆಡೆ, ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದಲ್ಲಿಯೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲಿದೆಯೇ ಎಂಬ ಕುತೂಹಲ ಮೂಡಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ, ಸಿಎಎ ಜಾರಿ ವಿಚಾರವಾಗಿ ರಾಜ್ಯದಲ್ಲಿ ಇನ್ನೂ ಚರ್ಚೆ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ. ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.