ಬೆಂಗಳೂರು : ಡಾ.ಸಿ.ಎನ್. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಈ ಸಂಬಂಧ ಮಂಜುನಾಥ್ ಅವರು ಕೆಲ ಬಿಜೆಪಿ ನಾಯಕರನ್ನು ಭೇಟಿಯಾಗುವ ಮೂಲಕ ಚುನಾವಣಾ ತಯಾರಿ ನಡೆಸಿದ್ದಾರೆ. ಅದರಂತೆ ಇಂದು ಸಂಜೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಬಳಿಕ ನಾಳೆ ಅಂದರೆ ಮಾರ್ಚ್ 14ರಂದು ಮಂಜುನಾಥ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಮಂಜುನಾಥ್ ಅವರು ಬಿಜೆಪಿ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ.
ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ದಾಸ್ ಅಗರ್ವಾಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಮಂಜುನಾಥ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.