ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆಂದು ದೆಹಲಿಗೆ ಹೊರಟ್ಟಿದ್ದ ಹುಬ್ಬಳ್ಳಿಯ ರೈತರನ್ನು ಭೂಪಾಲ್ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಭೂಪಾಲ್ ಪೊಲೀಸರ ನಡೆಯನ್ನು ಖಂಡಿಸಿದ್ದಾರೆ. ಅಲ್ಲದೆ ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.