ಮೈಸೂರು: ಬಿಜೆಪಿ ಜವಾಬ್ದಾರಿಯುತ ಪ್ರತಿಪಕ್ಷವಾಗಿ, ಕಾನೂನಾತ್ಮಕವಾಗಿಯೂ ಹೋರಾಟ ಮುಂದುವರಿಸಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆ, ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂಸದ, ಸಿಎಂ ವಿಚಾರದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರು ಮುಂದೆ ಯಾವ ಕ್ರಮ ಕೈಗೊಳ್ಳಲಿದ್ದಾರೆಂದು ಕಾಯ್ದು ನೋಡಬೇಕಿದೆ. ವಾಲ್ಮೀಕಿ ನಿಗಮ ಮತ್ತು ಮುಡಾದಲ್ಲಿ ನಡೆದಿರುವ ಅಕ್ರಮಗಳ ಕುರಿತು ಬಿಜೆಪಿ ಹೋರಾಟ ನಡೆಸುತ್ತಾ ಬಂದಿತ್ತು. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದರಿಂದ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗುವ ವಿಶ್ವಾಸವಿದೆ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದುದು ಅದರಂತೆಯೇ ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಕ್ರಮ ಕೈಗೊಂಡಿದ್ದಾರೆ. ಬಿಜೆಪಿ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.