ಮುಂಬೈ: ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ, ಪದ್ಮವಿಭೂಷಣ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ. ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಅವರ 86 ನೇ ವಯಸ್ಸಿನಲ್ಲಿ ಕೊನೆಯುಸಿರೆಳಿದಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ರಾತ್ರಿ 11.30ರ ಸಮಯದಲ್ಲಿ ರತನ್ ಟಾಟಾ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ರತನ್ ಟಾಟಾ ಅನೇಕ ಪ್ರಮುಖ ಟಾಟಾ ಉದ್ಯಮಗಳಾದ ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಕಂಪನಿಗಳನ್ನು ಸ್ಥಾಪಿಸಿದ್ದರು. ರತನ್ ಟಾಟಾ ಅವರು ಕೈಗಾರಿಕೋದ್ಯಮ, ವ್ಯಾಪಾರ ಸಾಮ್ರಾಜ್ಯದಲ್ಲಿ ತಮ್ಮದೇ ಆದ ವಿಶೇಷ ಗುರುತನ್ನು ಗಳಿಸಿದ್ದವರು. ವ್ಯಾಪಾರದಲ್ಲಿ ಮಾತ್ರವಲ್ಲದೆ ಸಮಾಜ ಸೇವೆ, ಪರೋಪಕಾರಿಯಲ್ಲೂ ರತನ್ ಟಾಟಾ ಅವರಿಗೆ ಸರಿಸಾಟಿ ಯಾರೂ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಬಹಳ ದಾನ ಧರ್ಮ ಉದಾರಗಳ ರತನ್ ಟಾಟಾ ನಿಜಕ್ಕೂ ಉದಾತ್ತ ವ್ಯಕ್ತಿಯಾಗಿದ್ದರು. ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತ್ತು.
ಕೇವಲ ಎರಡು ದಿನಗಳ ಹಿಂದೆಯಷ್ಟೇ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದ ಪೋಸ್ಟ್ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ತನ್ನ ಆರೋಗ್ಯದ ಬಗ್ಗೆ ಹರಡುತ್ತಿರುವ ವದಂತಿಗಳನ್ನು ತಳ್ಳಿಹಾಕಿದರು. ಅಲ್ಲದೆ “ನನ್ನ ಬಗ್ಗೆ ಯೋಚಿಸಿದ್ದಕ್ಕಾಗಿ ಧನ್ಯವಾದಗಳು” ಎಂದು ತಿಳಿಸಿದ್ದರು. https://x.com/RNTata2000/status/1843186838787526796
ದೇಶದ ಬಗ್ಗೆ ಅಪಾರ ಗೌರವ, ಪ್ರೀತಿ ಹೊಂದಿದ್ದ ದೇಶದ ಹೆಮ್ಮೆಯ ಕೈಗಾರಿಕೋದ್ಯಮಿ, ರತನ್ ಟಾಟಾ ಅವರ ಸಾವಿಗೆ ಗಣ್ಯರು ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಸಚಿನ್ ತೆಂಡೂಲ್ಕರ್, ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಸೇರದಂತೆ ಪ್ರಮುಖರು ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.