ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸತ್ಯಭಾಮಾ ಸೂಚನೆ
ಪ್ರತಿನಿಧಿ ವರದಿ ಹಾಸನ
ಪರಿಶಿಷ್ಟ ಜಾತಿ ಹಾಗೂ ಪಂಗಡದ ಉಪ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸತ್ಯಭಾಮಾ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ರಾಷ್ಟ್ರೀಯ ಆಹಾರ ಸುರಕ್ಷತೆ ಮಿಷನ್ ನಡಿಯಲ್ಲಿ ಬಿತ್ತನೆ ಬೀಜ, ಕೀಟನಾಶಕಗಳು, ಇತರ ಯಂತ್ರೋಪಕರಣಗಳನ್ನು ಸಹಾಯಧನದಲ್ಲಿ ವಿತರಿಸಲು ಕ್ರಮವಹಿಸುವಂತೆ ನಿರ್ದೇಶನ ನೀಡಿದರಲ್ಲದೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಜಲಾನಯನ ಅಭಿವೃದ್ಧಿಗೆ ಒತ್ತು ನೀಡಿ ಅರ್ಹ ಫಲಾನುಭವಿಗಳಿಗೆ ಸವಲತ್ತು ಒದಗಿಸಿ ಎಂದು ತಿಳಿಸಿದರು.
ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಶುಚಿತ್ವ ಕಾಪಾಡಿಕೊಂಡು ಉತ್ತಮ ರೀತಿಯಲ್ಲಿ ಆಹಾರ ನೀಡುತ್ತಿದ್ದಾರ? ಜತೆಗೆ, ಮಕ್ಕಳ ಆರೋಗ್ಯ ತಪಾಸಣೆಯನ್ನು ನಿಗದಿತ ಸಮಯಕ್ಕೆ ಮಾಡಲಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ 307 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳಿಲ್ಲ. ಈ ನಿಟ್ಡಿನಲ್ಲಿ ಗಮನಹರಿಸಿ ಸ್ಥಳ ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗೆ ಸೂಚಿಸಿದರಲ್ಲದೆ, ನಿಮ್ಮ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ಕೆಲಸಗಳನ್ನು ಬಾಕಿ ಉಳಿಸಿಲ್ಲ, ನೀವು ಸಹ ಅದೇ ರೀತಿ ಕೆಲಸ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್ ಫೀರ್, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.