ಪ್ರತಿನಿಧಿ ವರದಿ ಚಾಮರಾಜನಗರ
ರಾಜ್ಯ ಸರ್ಕಾರ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ವಿದ್ಯಾರ್ಥಿಗಳು ಸರ್ಕಾರ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದು ಸಮಾಜದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮ ಬೇಕು ಎಂದು ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2023-24ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾಕೂಟ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುತ್ತಿದೆ. ಸಿಆರ್ಎಫ್ ಅನುದಾನದಲ್ಲಿ ಚಂದಕವಾಡಿ ಶಾಲೆಯ ಬಾಲಕ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ತಲಾ 10ಲಕ್ಷ ರೂ. ಗಳಂತೆ ಒಟ್ಟು 40 ಲಕ್ಷ ರೂ. ಗಳನ್ನು ಶೌಚಾಲಯ, ಶುದ್ದ ಕುಡಿಯುವ ಘಟಕ ನಿರ್ಮಿಸಲು ಬಿಡುಗಡೆ ಮಾಡಲಾಗಿದೆ ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಮಂಜುನಾಥ್ ಪ್ರಸನ್ನ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹೋಲಿಸಿದರೆ. ಸರ್ಕಾರಿ ಶಾಲಾ-ಕಾಲೇಜಿನಲ್ಲೂ ಉತ್ತಮ ತರಬೇತಿ ಪಡೆದ ನುರಿತ ಉಪನ್ಯಾಸಕರು, ಶಿಕ್ಷಕರ ಸಮೂಹವೇ ಇದೆ. ಇದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಮೂವರು ವಿದ್ಯಾರ್ಥಿಗಳು ಪ್ರಥಮ ಬಾರಿಗೆ ವೈದ್ಯಕೀಯ ಶಿಕ್ಷಣಕ್ಕೆ ಸೀಟು ಪಡೆದಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ 9 ವಿದ್ಯಾರ್ಥಿಗಳು, ಇತಿಹಾಸ, ಕನ್ನಡ, ಭೂಗೋಳಶಾಸ್ತ್ರದಲ್ಲಿ 100ಕ್ಕೆ 100 ಅಂಕಪಡೆದ ಮೂವರು ವಿದ್ಯಾರ್ಥಿಗಳು ಹಾಗೂ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಪ್ರಾಂಶುಪಾಲ ಸೋಮಣ್ಣ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಖಲೀಂ ಉಲ್ಲಾಖಾನ್, ಉಪನ್ಯಾಸಕ ಟಿ.ಮಧು, ರಂಗಸ್ವಾಮಿ, ಎಂ.ಮಹೇಂದ್ರ, ಶೀಲಾ, ಸವಿತಾ, ಕಾಲೇಜಿನ ಸಿಬ್ಬಂದಿ ಹಾಗೂ ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
27ಸಿಎಚ್ಎನ್.5: ಚಾಮರಾಜನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಪಡೆದ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.