ಪ್ರತಿನಿಧಿ ವರದಿ ಹಾಸನ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಸೆ.14ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಕಳೆದ ಜು.13 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 3,18,316 ಪ್ರಕರಣಗಳನ್ನು ಇತ್ಯರ್ಥಪಡಿಸಿ ಹಾಸನ ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಉಷಾರಾಣಿ ತಿಳಿಸಿದ್ದಾರೆ.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಾತನಾಡಿದ ಅವರು, ಸದರಿ ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ರಾಜಿಯಾಗಬಲ್ಲ ಸಿವಿಲ್ , ಕ್ರಿಮಿನಲ್ , ಚೆಕ್ ಅಮಾನ್ಯ , ಬ್ಯಾಂಕ್ ವಸೂಲಾತಿ , ಮೋಟಾರು ಅಪಘಾತ ಪರಿಹಾರ , ಭೂ ಸ್ವಾಧೀನ , ಕಂದಾಯ , ಜನನ ನೋಂದಣಿ ಪ್ರಕರಣ, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರ ಲಘು ಕ್ರಿಮಿನಲ್ ಪ್ರಕರಣಗಳು ಸೇರದಂತೆ ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳು, ನೀರಿನ ಕರವಸೂಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ.
ಸಂಬಂಧಪಟ್ಟ ಕಕ್ಷಿಗಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದ ತೀರ್ಮಾನವಾಗುತ್ತದೆ ಎಂದರು.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ. ಇದರಿಂದ ಸಮಯದ ಉಳಿತಾಯವಾಗಲಿದ್ದು, ಶೀಘ್ರ ನ್ಯಾಯದಾನಕ್ಕೆ ಅವಕಾಶವಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ ಮಾತನಾಡಿ, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು, ತಾಲೂಕುಗಳಲ್ಲಿ ನ್ಯಾಯಾಲಯ ಆವರಣದಲ್ಲಿರುವ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.