ಪ್ರತಿನಿಧಿ ವರದಿ ಮೈಸೂರು
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜಿ ಆಗಬಹುದಾದ ಪ್ರಕರಣಗಳು ಮತ್ತು ವಾಜ್ಯ ಪೂರ್ವ ಪ್ರಕರಣಗಳ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡುವ ಸಲುವಾಗಿ ಸೆ.14ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಮೈಸೂರು ನಗರ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಒಟ್ಟು 1,17,013 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳಲ್ಲಿ 58,030 ಸಿವಿಲ್ ಹಾಗೂ 58,983 ಕ್ರಿಮಿನಲ್ ಪ್ರಕರಣಗಳಿವೆ. ಈ ಪ್ರಕರಣಗಳ ಪೈಕಿ 30,000ಕ್ಕಿಂತ ಹೆಚ್ಚಿನ ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣಗಳಾಗಿವೆ. ಈ ರೀತಿ ರಾಜಿ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಕಕ್ಷಿಗಾರರ ವಿನಂತಿ ಮೇರೆಗೆ ಸಂಬಂಧಪಟ್ಟ ಕೋರ್ಟ್ಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಮೂಲಕ ಅರ್ಜಿ ಸಲ್ಲಿಸಿದರೆ ಅಂತಹ ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲು ಕ್ರಮಕೈಗೊಳ್ಳಲಾಗುವುದು.
ಈ ಹಿನ್ನೆಲೆಯಲ್ಲಿ ಕಕ್ಷಿದಾರರು, ಸಾರ್ವಜನಿಕರು ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಜಿ. ದಿನೇಶ್ ತಿಳಿಸಿದ್ದಾರೆ.
=================