ಚಿತ್ರದುರ್ಗ : ಲೋಕಸಭೆ ಚುನಾವಣೆಗೆ ಅಖಾಡ ಸಿದ್ದವಾಗಿದೆ. ರಾಜ್ಯದಲ್ಲಿ ಬಂಡಾಯದ ರಾಜಕೀಯ ಆರಂಭವಾಗಿದೆ. ಅಸಮಾಧಾನಿತರು ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಟಿಕೆಟ್ ತಪ್ಪಿದ್ದಕ್ಕೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಅಸಮಾಧಾನಗೊಂಡಿದ್ದು, ಬಿ ಶ್ರೀರಾಮುಲು ವಿರುದ್ಧ ತೊಡೆ ತಟ್ಟಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದೆ. ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಶ್ರೀರಾಮುಲು ಜೊತೆಗೂ ಚರ್ಚಿಸಿದ್ದೆ. ಯಡಿಯೂರಪ್ಪ ಬಳಿ ಹೋಗೋಣ ಎಂದು ಶ್ರೀರಾಮುಲು ಹೇಳಿದ್ದರು. ನನ್ನ ಜತೆ ಚರ್ಚೆ ಮಾಡದೆ ಶ್ರೀರಾಮುಲುಗೆ ಟಿಕೆಟ್ ಘೋಷಿಸಿದ್ದಾರೆ. ಹಾಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.