ಮೈಸೂರು: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆರಳುವ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಮಂಗಳವಾರ ಸಂಜೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಎಂ ಹಾಗೂ ಡಿಸಿಎಂ ಅವರುಗಳು ಮೈಸೂರು ಭಾಗದ ಶಾಸಕರು, ಸಂಸದರು ಮತ್ತು ಸ್ಥಳೀಯ ಮುಖಂಡರುಗಳನ್ನು ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಪರಿಚಯ ಮಾಡಿಕೊಟ್ಟರು.
ಬಳಿಕ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರುಗಳು ರಸ್ತೆ ಮಾರ್ಗವಾಗಿ ವಯನಾಡಿಗೆ ತೆರಳಿದರು. ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಸಂಸದ ಸುನೀಲ್ ಬೋಸ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಡಿ. ರವಿಶಂಕರ್, ದರ್ಶನ್ ಧ್ರುವನಾರಾಯಣ್, ಎ.ಆರ್. ಕೃಷ್ಣಮೂರ್ತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯ್ ಕುಮಾರ್ ಸೇರಿದಂತೆ ಹಲವು ಮುಖಂಡರು ಇದ್ದರು.