ಪ್ರತಿನಿಧಿ ವರದಿ ಚಾಮರಾಜನಗರ
ಎಸ್ಎಸ್ಎಲ್ಸಿ ಪರೀಕ್ಷೆ ಮಾ.25ರಿಂದ ಏ.6ರವರೆಗೆ ಜಿಲ್ಲೆಯ ಒಟ್ಟು 45 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಯಲೆಂಬ ಸದುದ್ದೇಶದಿಂದ, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200ಮೀ. ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ ತಾಲೂಕಿನ 15, ಕೊಳ್ಳೇಗಾಲ ತಾಲೂಕಿನ 8, ಗುಂಡ್ಲುಪೇಟೆ ತಾಲೂಕಿನ 9, ಯಳಂದೂರು ತಾಲೂಕಿನ 4 ಹಾಗೂ ಹನೂರು ತಾಲೂಕಿನ 9 ಸೇರಿದಂತೆ ಒಟ್ಟು 45 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ರನ್ವಯ ಪರೀಕ್ಷಾ ದಿನಗಳಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಅಲ್ಲದೇ ಸದರಿ ದಿನಗಳಂದು ಪರೀಕ್ಷಾ ಕೇಂದ್ರದ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮುಚ್ಚಲು ಆದೇಶಿಸಲಾಗಿದೆ.
ನಿಷೇಧಾಜ್ಞೆ ಆದೇಶವು ಪರೀಕ್ಷೆ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಮತ್ತು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.