ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ । ವಿಶ್ವ ಸಿಕಲ್ ಸೆಲ್ ಅನೀಮಿಯಾ ನಿರ್ಮೂಲನಾ ಅಭಿಯಾನ
ಪ್ರತಿನಿಧಿ ವರದಿ ಮೈಸೂರು
ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸಿ ಉತ್ತಮ ಆರೋಗ್ಯ ಸೇವೆಗಳನ್ನು ನೀಡುವುದು ಹಾಗೂ ರಾಜ್ಯವನ್ನು ಅನೀಮಿಯಾ ಮುಕ್ತ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಸಿಕಲ್ ಸೆಲ್ ಅನೀಮಿಯಾ ನಿರ್ಮೂಲನಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಹಯೋಗದಲ್ಲಿ ರೂಪಿಸಿರುವ ಪ್ರಾಜೆಕ್ಟ್ ಚಂದನ ಯೋಜನೆಯನ್ನು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 2 ವರ್ಷ ಅವಧಿಗೆ ಜಾರಿಗೊಳಿಸಲಾಗುತ್ತಿದೆ. ಸಿಕಲ್ ಸೆಲ್ ಅನಿಮಿಯಾ ರೋಗದ ಪತ್ತೆ, ಜಾಗೃತಿ ಹಾಗೂ ಚಿಕಿತ್ಸೆ ನೀಡುವುದು ಗುರಿಯಾಗಿದ್ಧು, ಸರಳವಾಗಿ ಅನಿಮಿಯಾ ಕಂಡು ಹಿಡಿಯುವ ಸಾಧನವನ್ನು ಭಾರತೀಯ ವಿಜ್ಞಾನ ಸಂಸ್ಥೆಯ ಯುವ ವಿಜ್ಞಾನಿಗಳು ಅಭಿವೃದ್ದಿಪಡಿಸಿದ್ದು, ಈ ಸಾಧನಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ಕೊಡುಗೆಯಾಗಿ ನೀಡುತ್ತಿದೆ ಎಂದರು.
ರಾಜ್ಯದ 7 ಜಿಲ್ಲೆಗಳಲ್ಲಿ ಸಿಕಲ್ ಸೆಲ್ ಅನೀಮಿಯಾ ಪರೀಕ್ಷೆ ಮಾಡಲಾಗಿದ್ದು ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಿಕಲ್ ಸೆಲ್ ಅನೀಮಿಯಾ ಕಂಡುಬಂದಿದೆ. ಸಿಕಲ್ ಸೆಲ್ ಅನೀಮಿಯಾ ಒಂದು ಅನುವಂಶೀಯ ಕಾಯಿಲೆ ಆಗಿದ್ದು, ಸಿಕಲ್ ಸೆಲ್ ಅನೀಮಿಯಾ ಸಮಸ್ಯೆ ಹೊಂದಿರುವವರನ್ನು ಗುರುತಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪ್ರಾಜೆಕ್ಟ್ ಚಂದನ ಯೋಜನೆಯಡಿ ಮುಂದಿನ 2 ವರ್ಷಗಳಲ್ಲಿ 2.56 ಲಕ್ಷ ಜನರನ್ನು ಪರೀಕ್ಷೆಗೆ ಒಳಪಡಿಸಿ ಸಿಕಲ್ ಸೆಲ್ ಅನೀಮಿಯಾ ಇರುವವರನ್ನು ಗುರುತಿಸಿ ಚಿಕಿತ್ಸೆ ನೀಡುವ ಗುರಿ ಹೊಂದಲಾಗಿದೆ. ಆರೋಗ್ಯ ಇಲಾಖೆಯ ಸೇವೆಗಳನ್ನು ಉತ್ತಮ ಪಡಿಸಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಬಡ ಜನರಿಗೆ ಸಕಾಲದಲ್ಲಿ ದೊರೆಯುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಬುಡಕಟ್ಟು ಜನಾಂಗದಲ್ಲಿ ಹೆಚ್ಚಾಗಿ ಸಿಕಲ್ ಸೆಲ್ ಅನೀಮಿಯಾ ಕಂಡುಬರುತ್ತಿದೆ. ಅರಣ್ಯ ಪ್ರದೇಶದ ಹಾಡಿಗಳಲ್ಲಿ ವಾಸಿಸುತ್ತಿರುವರಲ್ಲಿ ಮಲೇರಿಯಾ, ಚಿಕೂನ್ ಗುನ್ಯಾ ಹೆಚ್ಚಾಗಿ ಕಂಡುಬರುತ್ತದೆ. ಬುಡಕಟ್ಟು ಜನಾಂಗದಲ್ಲಿ ವಾಸಿಸುತ್ತಿರುವ ಜನರು ಮದುವೆ ಆಗುವಾಗ ಜೆನೆಟಿಕ್ಸ್ ಟೆಸ್ಟ್ ಮಾಡಿಸಿ ಮದುವೆ ಆಗುವುದು ಉತ್ತಮ. ಸಿಕಲ್ ಸೆಲ್ ಅನೀಮಿಯಾ ಇರುವವರು ಪೌಷ್ಟಿಕ ಆಹಾರವನ್ನು ಸೇವನೆ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಸಿಕಲ್ ಸೆಲ್ ಅನೀಮಿಯಾ ಕಾಯಿಲೆಗೆ ತುತ್ತಾಗಿರುವ ಮಕ್ಕಳಿಗೆ ಜೆನಿಟಿಕ್ಸ್ ಕಾರ್ಡ್ಗಳನ್ನು ಸಚಿವ ದಿನೇಶ್ ಗುಂಡೂರಾವ್ ವಿತರಣೆ ಮಾಡಿದರು. ಸಮಾರಂಭದಲ್ಲಿ ಶಾಸಕ ಕೆ. ಹರೀಶ್ ಗೌಡ, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಯುವ ವಿಜ್ಞಾನಿ ಸಾಯಿ ಶಿವ ಸೇರಿದಂತೆ ಮತ್ತಿತರರು ಇದ್ದರು.
ಅನುವಂಶೀಯ ಕಾಯಿಲೆ:
ಸಿಕಲ್ ಸೆಲ್ ಅನೀಮಿಯಾ ಒಂದು ಅನುವಂಶೀಯ ರಕ್ತಕಣದ ಕಾಯಿಲೆ ಆಗಿದೆ. ಇದು ಹೆಚ್ಚಾಗಿ ಹಾಡಿ ಜನಾಂಗ ಹಾಗೂ ಬುಡಕಟ್ಟು ಜನಾಂಗದಲ್ಲಿ ಕಂಡುಬರುತ್ತದೆ. ಈವರೆಗೂ 57 ಸಾವಿರಕ್ಕೂ ಹೆಚ್ಚು ಜನರಿಗೆ ರಕ್ತ ಪರೀಕ್ಷೆ ಮಾಡಲಾಗಿದ್ದು, ಒಟ್ಟು 2018 ಜನರಲ್ಲಿ ಸಿಕಲ್ ಸೆಲ್ ಅನೀಮಿಯಾ ಕಂಡುಬಂದ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. 2047 ರೊಳಗೆ ಈ ಕಾಯಿಲೆಯನ್ನು ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ ಎಂದು ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಆರೋಗ್ಯ ಮತ್ತು ಕುಂಟುoಬ ಕಲ್ಯಾಣ ಸೇವೆಗಳ ಅಭಿಯಾನದ ನಿರ್ದೇಶಕ ಡಾ. ನವೀನ್ ಭಟ್ ಹೇಳಿದರು.
ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಸಿಕಲ್ ಸೆಲ್ ಅನೀಮಿಯಾ ಕಂಡುಬಂದಿದೆ. ಇದನ್ನು ನಿರ್ಮೂಲನೆ ಮಾಡಲು ಹೆಚ್ಚಾಗಿ ಪರೀಕ್ಷೆಗಳನ್ನು ಮಾಡಿ ಚಿಕಿತ್ಸೆ ನೀಡಬೇಕಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸುತ್ತಿದೆ. ನನ್ನ ಕಡೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು.
ಯದುವೀರ್ ಒಡೆಯರ್,
ಸಂಸದ